May 17, 2024

Chitradurga hoysala

Kannada news portal

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್: ಆಟೋ ಪ್ರಚಾರಾಂದೋಲನಕ್ಕೆ ಡಿಸಿ ಚಾಲನೆ

1 min read

ಚಿತ್ರದುರ್ಗ, ಆ.14:
ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸಿಕೊಂಡು ರೈತರು ತಮ್ಮ ಜಮೀನುಗಳಲ್ಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ನಿಖರವಾಗಿ ದಾಖಲು ಮಾಡಿ ಬೆಳೆ ಸಮೀಕ್ಷೆಯ ಅನುಕೂಲ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ  ಕಚೇರಿ ಆವರಣದಲ್ಲಿ ಶುಕ್ರವಾರ ಕೃಷಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ  ಹಮ್ಮಿಕೊಂಡಿದ್ದ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಆಟೋ ಪ್ರಚಾರಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  
ಬೆಳೆ ಸಮೀಕ್ಷೆ ಮೊಬೈಲ್ ಆಪ್ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದು, ರೈತರು ಸ್ವತಃ ತಾವು ಬೆಳೆದ ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಆಪ್ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸಲು ಅನುಸರಿಸಬೇಕಾದ ಪದ್ಧತಿ:


ಗೂಗಲ್ ಪ್ಲೇ ಸ್ಟೋರ್‍ನಲ್ಲಿ “ Farmers Crop Survery App 2020-21  ಎಂದು ಹುಡುಕಿ ಮೊಬೈಲ್ ಆಪ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳುವುದು.
 ರೈತರ ಹೆಸರು, ಮೊಬೈಲ್ ಸಂಖ್ಯೆ, ಮತ್ತು ಒಟಿಪಿ ಸಂಖ್ಯೆಯನ್ನು ನಮೂದಿಸಿ ರೈತರು ತಮ್ಮ ವಿವರಗಳನ್ನು ನೋಂದಣಿ ಮಾಡಿಕೊಳ್ಳಬೇಕು. ಮೊಬೈಲ್ ಆಪ್‍ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಸರ್ವೆ ನಂಬರ್‍ಗಳನ್ನು ಆಪ್‍ಗೆ ಸೇರಿಸಿಕೊಳ್ಳಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ,  ಕೃಷಿ ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರವನ್ನು ಸಹ ದಾಖಲಿಸಬೇಕಾಗುತ್ತದೆ. ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ 2 ಛಾಯಾಚಿತ್ರಗಳನ್ನು ತೆಗೆದು ಅಪ್‍ಲೋಡ್ ಮಾಡಬೇಕಾಗಿರುತ್ತದೆ. ಹೀಗೆ ಅಪ್‍ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ. ಈ ಸಂದರ್ಭದಲ್ಲಿ ರೈತರು ದಾಖಲಿಸಿದ ಬೆಳೆ ವಿವರಕ್ಕೂ, ಛಾಯಚಿತ್ರಕ್ಕೂ ತಾಳೆಯಾಗದ ಸಂದರ್ಭದಲ್ಲಿ ಮೇಲ್ವಿಚಾರಕರು ಅಂತಹ ಮಾಹಿತಿಯನ್ನು ತಿರಸ್ಕರಿಸಿ ಮರು ಸಮೀಕ್ಷೆಗೆ ಖಾಸಗಿ ನಿವಾಸಿಗಳಿಗೆ ಕಳುಹಿಸುತ್ತಾರೆ.
 ಒಂದು ವೇಳೆ ರೈತರು ಮತ್ತು ತಮ್ಮ ಸ್ನೇಹಿತರು ಅಥವಾ ಸಂಬಂಧಕರಿಗೆ ಸಹಾಯ ಮಾಡುವುದಾದರೆ ಅದರ ಸರ್ವೆ ನಂಬರ್‍ಗಳನ್ನು  ಸಹ ತಮ್ಮ ಮೊಬೈಲ್ ಆಪ್‍ನಲ್ಲಿ ಸೇರಿಸಿಕೊಂಡು ಅವರ ಜಮೀನಿನ ವಿವರ ದಾಖಲಿಸಲೂ ಸಹ ಮೊಬೈಲ್ ಆಪ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ರೈತರು ಸ್ವತಃ ತಮ್ಮ ಬೆಳೆ ವಿವರಗಳನ್ನು ದಾಖಲಿಸಲು ಆಗಸ್ಟ್ 24 ರವರೆಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಬೆಳೆ ವಿವರ ದಾಖಲಿಸಲಾಗದ ರೈತರ ಜಮೀನಿನ ಬೆಳೆ ವಿವರಗಳನ್ನು ಖಾಸಗಿ ನಿವಾಸಿಗಳು ದಾಖಲಿಸುತ್ತಾರೆ.
ಬೆಳೆ ಸಮೀಕ್ಷೆಯ ಅನುಕೂಲಗಳು:
ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು ಸಹಾಯಕವಾಗುತ್ತದೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಬಹುದು. ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ  ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ , ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ನೆರವಾಗುತ್ತದೆ.
ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೇ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಟಾನಕ್ಕೆ, ಪಹಣೆಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಸಹಾಯಕವಾಗುತ್ತದೆ.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್ ವೆಂಕಟೇಶಯ್ಯ, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯಪ್ಪ, ಚಿತ್ರದುರ್ಗ ತಾಲ್ಲೂಕು ಕೃಷಿ ಅಧಿಕಾರಿ ಭಾರತಮ್ಮ, ತಾಂತ್ರಿಕ ಅಧಿಕಾರಿ ಮಲ್ಲನಗೌಡ, ಕೃಷಿ ಅಧಿಕಾರಿಗಳಾದ ಮಂಜುನಾಥಸ್ವಾಮಿ, ಪ್ರದೀಪ್ ಕುಮಾರ್ ಹಾಗೂ ಅನುವುಗಾರರು ಉಪಸ್ಥಿತರಿದ್ದರು.
   

About The Author

Leave a Reply

Your email address will not be published. Required fields are marked *