ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರಾತಿಷ್ಠಾಪನೆಗೆ ನಿರ್ಬಂಧ,
ಗಣೇಶೋತ್ಸವ ಮಾರ್ಗಸೂಚಿಗಳನ್ನು ಪಾಲಿಸಲು ಡಿಸಿ ಕವಿತಾ ಎಸ್ ಮನ್ನಿಕೇರಿ ಆದೇಶ
1 min read
ಚಿತ್ರದುರ್ಗ, ಆ.16:
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಇನ್ನಿತರೆ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
ಕೇಂದ್ರೀಯ ಗೃಹ ಮಂತ್ರಾಲಯವು ಜುಲೈ 29 ರಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತೆರವು-3 ಮಾರ್ಗಸೂಚಿಗಳನ್ನು ಹೊರಡಿಸಿ ಆದೇಶಿಸಿದ್ದು, ಆಗಸ್ಟ್ 31 ರವರೆಗೆ ಜಾರಿಯಲ್ಲಿರುತ್ತದೆ. ಕೇಂದ್ರ ಸರ್ಕಾರವು ಹೊರಡಿಸಿರುವ ತೆರವು-3ರ ಅವಧಿಯಲ್ಲಿ ಅನುಮತಿಸಲಾದ ಚಟುವಟಿಕೆಗಳಲ್ಲಿ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳಿಗೆ ಅನುಮತಿ ನೀಡಿರುವುದಿಲ್ಲ. ಅದರಂತೆ ರಾಜ್ಯಸರ್ಕಾರವು ಮಾರ್ಗಸೂಚಿಗಳನ್ನು ಯಥವತ್ತಾಗಿ ಪಾಲನೆ ಮಾಡಲು ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರವು ಗಣೇಶೋತ್ಸವ ಆಚರಿಸುವ ಸಂಬಂಧ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿರುತ್ತದೆ. ಹಾಗೂ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇಲಾಖಾ ಮುಖ್ಯಸ್ಥರುಳು ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ನಿರ್ದೇಶನವಿರುತ್ತದೆ.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಠಿಯಿಂದ, ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಿಸುವ ಸಂಬಂಧ ಈ ಕೆಳಕಂಡ ಮಾರ್ಗಸೂಚಿಗಳನ್ನು ಪಾಲಿಸಲು ಆದೇಶಿಸಿದೆ.
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು. ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳಗಳಾದ ರಸ್ತೆ, ಗಲ್ಲಿ, ಓಣಿ ಮೈದಾನ ಇತ್ಯಾದಿಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡತಕ್ಕದ್ದಲ್ಲ. ಗಣೇಶೋತ್ಸವದಲ್ಲಿ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡುವುದು. ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಟ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸತಕ್ಕದ್ದು. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನು ತಡೆಗಟ್ಟುವ ನಿಟ್ಟನಿಲ್ಲಿ ರಾಷ್ಟ್ರೀಯ ನಿರ್ದೇನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಹಾಗೂ ಇತೆರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚನೆಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.
ಗಣೇಶೋತ್ಸವ ಆಚರಣಾ ಕಾಲಕ್ಕೆ ಸಂದರ್ಭಕ್ಕೆನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.