ಕನ್ನಡ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ: ಸರಳವಾಗಿ ಆಚರಣೆಗೆ ತಿರ್ಮಾನ
1 min readಚಿತ್ರದುರ್ಗ, ಅಕ್ಟೋಬರ್ 21:
ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದರ ಜೊತೆಗೆ ಕೋವಿಡ್-19 ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ದೈಹಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಅಗತ್ಯ ಮುನ್ನಚ್ಚರಿಕೆಗಳೊಂದಿಗೆ 200 ಜನಕ್ಕಿಂತ ಹೆಚ್ಚು ಜನರು ಸೇರದಂತೆ ರಾಜ್ಯೋತ್ಸವ ಆಚರಿಸಬೇಕಿದೆ ಎಂದು ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಕವಾಯುತು (ಡಿಎಆರ್) ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ನಿರ್ಧರಿಸಿದ್ದು ಈ ವೇಳೆ ರಾಷ್ಟ್ರ ಧ್ವಜರೋಹಣ ನೆರವೇರಿಸುವ ಸಂಬಂಧ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಭಾರತ ಸೇವಾದಳ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ ಧ್ವಜಕಟ್ಟೆಯ ವ್ಯವಸ್ಥೆಯನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವಂತೆ ತಿಳಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಈ ಬಾರಿ ಆಹ್ವಾನಿಸುತ್ತಿಲ್ಲ. ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಭಯ ನಿವಾರಣೆ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಲಾಗುವುದು.ಇದರ ಜೊತೆಗೆ ಸ್ತಬ್ಧ ಚಿತ್ರಗಳಲ್ಲಿಯೂ ಕೋವಿಡ್-19 ಜಾಗೃತಿ ಮೂಡಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಪೊಲೀಸ್, ಗೃಹ ರಕ್ಷಕ ದಳ ಸೇರಿದಂತೆ 6 ರಿಂದ 8 ತಂಡಗಳು ಮಾತ್ರ ಪೆರೇಡ್ ನಡೆಸುವಂತೆ ಸೂಚಿಸಿದ ಅವರು, ಸುರಕ್ಷತೆ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಆಗಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಯೋಗೇಶ, ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು.
=========