May 6, 2024

Chitradurga hoysala

Kannada news portal

ವಿಕಲಚೇತನರನ್ನು ಗುರುತಿಸಿ, ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು: ಜಿ.ಪಂ.ಸಿಇಒ ಟಿ.ಯೋಗೇಶ

1 min read

ಚಿತ್ರದುರ್ಗ, ಡಿಸೆಂಬರ್03:
 ಸರ್ಕಾರದ ವಿವಿಧ ಇಲಾಖೆಗಳ ಜೊತೆಯಲ್ಲಿ ಸೇವಾ ಸಂಸ್ಥೆಗಳು ಹಾಗೂ ಸಮುದಾಯ ವಿಕಲಚೇತರನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಟಿ.ಯೋಗೇಶ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂಸೇವಾಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 ವಿಕಲಚೇತನರನ್ನು ಮೊದಲು ಗುರುತಿಸುವ ಕೆಲಸವಾಗಬೇಕು. ನಂತರ ಸರ್ಕಾರದ ವಿವಿಧ ಇಲಾಖೆ, ಸ್ವಯಂಸೇವಾ ಸಂಸ್ಥೆಗಳ ಮೂಲಕ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ವಿಕಲಚೇತನರ ಹಕ್ಕುಗಳ ರಕ್ಷಣೆ ಮಾಡಲು ವಿವಿಧ ಇಲಾಖೆಗಳಲ್ಲಿರುವ ಅವಕಾಶಗಳನ್ನು ಪಡೆದು ವಿಕಲಚೇತನರ ರಕ್ಷಣೆಗೆ ಎಲ್ಲರೂ ಸಂಕಲ್ಪ ಮಾಡೋಣ ಎಂದರು.  
 ಈ ಬಾರಿ ವಿಶ್ವ ವಿಕಲಚೇತನ ದಿನಾಚರಣೆಯನ್ನು ಕೋವಿಡ್ ಕಾರಣಕ್ಕಾಗಿ  ಬಹಳ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 35,971 ಜನ ವಿಕಲಚೇತನರು ಇದ್ದಾರೆ. 2016ರ ವಿಕಲಚೇತನರ ಹಕ್ಕುಗಳ ಕಾಯ್ದೆಯು ವಿಕಲಚೇತನರ ಹಕ್ಕುಗಳನ್ನು ರಕ್ಷಣೆ ಮಾಡುವಲ್ಲಿ ಹಾಗೂ ವಿವಿಧ ಬಗೆಯ ಅಂಗವಿಕಲತೆ ವಿಧಗಳನ್ನು ಗುರುತು ಮಾಡಿ ಅವರೆಲ್ಲರಿಗೂ ಕಾಯ್ದೆಯು ರಕ್ಷಣೆಯನ್ನು ಒದಗಿಸಿದ್ದು, ಇದೊಂದು ಕ್ರಾಂತಿಕಾರಿ ಕಾಯ್ದೆಯಾಗಿದೆ ಎಂದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತಹ ಅಂಗವಿಕಲರ ಸ್ನೇಹಿ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು. ಪಂಚಾಯಿತಿ ವ್ಯಾಪ್ತಿ, ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ವಿವಿಧ ಇಲಾಖೆಗಳಲ್ಲಿ ಅಭಿವೃದ್ಧಿ ಅನುದಾನದಲ್ಲಿ ಶೇ.5 ರಷ್ಟು ಅನುದಾನವನ್ನು ಅಂಗವಿಕಲರಿಗಾಗಿ ವೆಚ್ಚ ಮಾಡಲಾಗುತ್ತಿದೆ ಎಂದರು.
 ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಜೆ.ವೈಶಾಲಿ ಮಾತನಾಡಿ, ವಿಕಲಚೇತನರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಇಲಾಖೆಯಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವುದರ ಮೂಲಕ ಜಿಲ್ಲೆಯ ವಿಕಲಚೇತನರಿಗೆ ಸೌಲಭ್ಯ ವಿತರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
 ಈ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿಕಲಚೇತನ ವಿದ್ಯಾರ್ಥಿಗಳಾದ ಚಳ್ಳಕೆರೆಯ ಬಿಎಂಜಿಹೆಚ್‍ಎಸ್ ಶಾಲೆಯ ಎಸ್.ಅಭಿಷೇಕ್, ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಮಾರುತಿ ಗ್ರಾಮಾಂತರ ಪ್ರೌಢಶಾಲೆಯ ಇಂದುಮುಖಿ, ಹಿರಿಯೂರು ತಾಲ್ಲೂಕಿನ ಎಂ.ಡಿ.ಕೋಟೆ ಸರ್ಕಾರಿ ಪ್ರೌಢಶಾಲೆಯ ಟಿ.ರಾಮಾಂಜನೇಯ, ಹೊಳಲ್ಕೆರೆ ತಾಲ್ಲೂಕಿನ ಎನ್.ಹಳ್ಳಿ ಸ.ಪ.ಪೂರ್ವ ಕಾಲೇಜು ಪ್ರಾಢಶಾಲಾ ವಿಭಾಗದ ಪ್ರತಿಭಾ, ಹೊಸದುರ್ಗ ಸ.ಪ.ಪೂರ್ವ ಕಾಲೇಜಿನ ಗಗನ ಹಾಗೂ ಮೊಳಕಾಲ್ಮುರು ದೇವಸಮುದ್ರದ ಸರ್ಕಾರಿ ಪ್ರೌಢಶಾಲೆಯ ವೈ.ಹರೀಶ್ ಅವರನ್ನು ಸನ್ಮಾನಿಸಲಾಯಿತು.
ಕ್ರೀಡೆ, ಸಾಹಿತ್ಯ, ಶಿಕ್ಷಣ, ಸಮಾಜ ಸೇವೆ, ಸಂಗೀತ, ಕಲಾ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ  ವಿಕಲಚೇತನರನ್ನೂ ಸನ್ಮಾನಿಸಿ ಗೌರವಿಸಲಾಯಿತು.
 ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಹಮದ್ ಮುಬೀನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್.ರಾಜಾನಾಯ್ಕ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರು, ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *