ಉತ್ತಮ ಆರೋಗ್ಯಕ್ಕೆ ಕ್ರೀಡೆ ಮುಖ್ಯ: ಡಿಸಿ ಕವಿತಾ ಎಸ್.ಮನ್ನಿಕೇರಿ
1 min readಚಿತ್ರದುರ್ಗ,ಜನವರಿ29:
ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ. ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಸೋಲು-ಗೆಲುವು ಅಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಅಧಿಕಾರಿಗಳಿಗೆ, ನೌಕರರಿಗೆ ಕ್ರೀಡಾಕೂಟ ಬಹಳ ಮುಖ್ಯ. ಸರ್ಕಾರಿ ನೌಕರರು ಕೆಲಸದ ಒತ್ತಡದ ನಿರ್ವಹಣೆಗಾಗಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅವಶ್ಯಕವಾಗಿದೆ. ಆರೋಗ್ಯವೇ ಭಾಗ್ಯ ಆಗಿರುವುದರಿಂದ ಇತರೆ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಆರೋಗ್ಯ ಚೆನ್ನಾಗಿ ಇದ್ದಾಗ ಮಾತ್ರ ನಾವು ಮನೆಯಲ್ಲಿ, ಕಚೇರಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ. ಎಲ್ಲಾ ಇಲಾಖೆಯ ನೌಕರರು ಒಂದೆಡೆ ಸೇರುವ ಮೂಲಕ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದರು.
ಸರ್ಕಾರಿ ನೌಕರಿ ಲಕ್ಷಕ್ಕೊಬ್ಬರಿಗೆ ಮಾತ್ರ ಸಿಗುವುದು. ಅದೃಷ್ಟವಂತರು ಮಾತ್ರ ಸರ್ಕಾರಿ ನೌಕರರಾಗಲು ಸಾಧ್ಯ. ಹಾಗಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಿ ಎಂದು ನೌಕರರಿಗೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಮಾತನಾಡಿ, ಎಲ್ಲಾ ನೌಕರರು ಒಂದೆಡೆ ಸೇರಿರುವುದು ಸಂತಸ ತಂದಿದೆ. ಈ ರೀತಿಯ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಬಾಲ್ಯದ ನೆನಪುಗಳನ್ನು ಮೆಲಕು ಹಾಕಲು ಸಾಧ್ಯವಿದೆ. ಎಲ್ಲಾ ನೌಕರರು ಜಿಲ್ಲಾ ಮತ್ತು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಹೆಸರು ತನ್ನಿ ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿ ದೇವಿ ಮಾತನಾಡಿ, ಸರ್ಕಾರಿ ನೌಕರರು ಕೆಲಸದ ಜೊತೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಕ್ರೀಡೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್.ಜಯಲಕ್ಷ್ಮಿಬಾಯಿ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದರು.