ಮೂರು ತಾಲ್ಲೂಕುಗಳಲ್ಲಿ ಬಿಳಿಜೋಳ ಖರೀದಿ ಕೇಂದ್ರ ಸ್ಥಾಪನೆ: ಡಿಸಿ ಕವಿತಾ ಎಸ್.ಮನ್ನಿಕೇರಿ
1 min read
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿಜೋಳ ಖರೀದಿ
ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಬಿಳಿಜೋಳ ಖರೀದಿ ಕೇಂದ್ರ ಸ್ಥಾಪನೆ: ಡಿಸಿ ಕವಿತಾ ಎಸ್.ಮನ್ನಿಕೇರಿ
*****
ಚಿತ್ರದುರ್ಗ,ಮಾರ್ಚ್04:
2020-21ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಲು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಕೂಡಲೇ ಬಿಳಿಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇನದಂತೆ ಜಿಲ್ಲೆಯ ಚಳ್ಳಕೆರೆ, ಹಿರಿಯೂರು, ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಹೆಚ್ಚಿನ ಜೋಳ ಬೆಳೆಯುವುದರಿಂದ ಜೋಳದ ಖರೀದಿಕೇಂದ್ರಗಳನ್ನು ಮೂರು ತಾಲ್ಲೂಕುಗಳಲ್ಲಿ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಅವರು, ರೈತರ ನೋಂದಣಿಗೆ ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ಈಗಾಗಲೇ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸಿಬ್ಬಂದಿಯ ಕೊರತೆ ಹೆಚ್ಚಾಗಿರುತ್ತದೆ. ಆದ್ದರಿಂದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಿಂದ ನಿಯೋಜನೆ ಮೇಲೆ ಸಿಬ್ಬಂದಿಗಳನ್ನು ಪಡೆಯುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಸದಾಶಿವ ಮಾತನಾಡಿ, 2020-21ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 4624 ಹೆಕ್ಟೇರ್ ಪ್ರದೇಶಗಳಲ್ಲಿ ಜೋಳ ಬಿತ್ತನೆಯಾಗಿದ್ದು, ರೈತರು ಹೆಚ್ಚಾಗಿ ಸ್ಥಳೀಯ ಬಿಳಿ ಜೋಳಗಳ ತಳಿಯನ್ನು ಬೆಳೆಯುತ್ತಿದ್ದು, ಬಂದಂತಹ ಉತ್ಪನ್ನವನ್ನು ಸ್ವಂತ ಮನೆಯ ಬಳಕೆಗೆ ಹೆಚ್ಚಾಗಿ ಬಳಕೆ ಮಾಡುತ್ತಿದ್ದು, ಹೆಚ್ಚುವರಿಯಾಗಿ ಉಳಿದ ಜೋಳದ ದಾಸ್ತಾನನ್ನು ಮಾತ್ರ ಮಾರಾಟ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಚಿತ್ರದುರ್ಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ರೂ.6,639/- ಗರಿಷ್ಠ ರೂ.6,961/- ಪ್ರತಿ ಕ್ವಿಂಟಲ್‍ಗೆ ಧಾರಣೆ ಇದೆ. ಇಲಾಖೆಯ ಬೆಲೆ ಯೋಜನೆಯಡಿ ರೈತರಿಗೆ ಹೈಬ್ರಿಡ್ ಜೋಳಕ್ಕೆ ಮಾತ್ರ ಪ್ರತಿ ಕ್ವಿಂಟಲ್‍ಗೆ ರೂ.2,640/- ನಿಗದಿಪಡಿಸಲಾಗಿದೆ ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಪ್ರಸನ್ನ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ.ಸವಿತಾ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಉಪನಿರ್ದೇಶಕರು, ರಾಜ್ಯ ಉಗ್ರಾಣ ನಿಗಮ ಶಾಖಾ ವ್ಯವಸ್ಥಾಪಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.