April 28, 2024

Chitradurga hoysala

Kannada news portal

ಕಂದಾಯ ಅಧಿಕಾರಿಗಳ ನಡೆ, ಹಳ್ಳಿಯ ಕಡೆ, ಹಿರಿಯೂರಿನ ಶೇಷಪ್ಪನಹಳ್ಳಿಯಲ್ಲಿ ವಾಸ್ತವ್ಯ.

1 min read

****
ಚಿತ್ರದುರ್ಗ,ಮಾರ್ಚ್17:
ಸಾರ್ವಜನಿಕರ ಅಹವಾಲು ಮತ್ತು ಬೇಡಿಕೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು, ಭೂದಾಖಲೆಗಳ ಉಪನಿರ್ದೇಶಕರು, ಭೂದಾಖಲೆಗಳ ಸಹಾಯಕ ನಿರ್ದೇಶಕರು ಪ್ರತಿ ತಿಂಗಳು 3ನೇ ಶನಿವಾರದಂದು ಉಪವಿಭಾಗ ಮಟ್ಟದ ಸಹಾಯಕ ಆಯುಕ್ತರು, ಸಂಬಂಧಪಟ್ಟ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರೊಂದಿಗೆ ಗ್ರಾಮಗಳಿಗೆ ಭೇಟಿ ಹಾಗೂ ಗ್ರಾಮ ವಾಸ್ತವ್ಯ ನಡೆಸಲಾಗುವುದು.
 ಜಿಲ್ಲಾಧಿಕಾರಿಗಳು ಯಾವ ತಾಲ್ಲೂಕಿಗೆ ಭೇಟಿ ನೀಡುತ್ತಾರೋ ಆ ತಾಲ್ಲೂಕಿನ ತಹಶೀಲ್ದಾರರನ್ನು ಹೊರತುಪಡಿಸಿ, ಉಳಿದ ತಾಲ್ಲೂಕು ತಹಶೀಲ್ದಾರರು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಪ್ರತಿ ತಿಂಗಳು 3ನೇ ಶನಿವಾರದಂದು ಗ್ರಾಮಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡುವರು.
  ಇದೇ ಮಾರ್ಚ್ 20 ರಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಹಿರಿಯೂರು ತಾಲ್ಲೂಕಿನ ಶೇಷಪ್ಪನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವರು. ಚಿತ್ರದುರ್ಗ ತಹಶೀಲ್ದಾರ್ ಭರಮಸಾಗರ ಹೋಬಳಿಯ ಶೀಗೇಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡುವರು. ಚಳ್ಳಕೆರೆ ತಹಶೀಲ್ದಾರ್ ಸಿದ್ದೇಶ್ವರನ ದುರ್ಗ, ಹೊಸದುರ್ಗ ತಹಶೀಲ್ದಾರ್ ನಾಗನಾಯ್ಕನ ಹಟ್ಟಿ, ಹೊಳಲ್ಕೆರೆ ತಹಶೀಲ್ದಾರ್ ಚಿಕ್ಕನಕಟ್ಟೆ, ಮೊಳಕಾಲ್ಮೂರು ತಹಶೀಲ್ದಾರ್ ಸೂರಮ್ಮನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವರು.
 ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ರುದ್ರಭೂಮಿ ಮತ್ತು ಇತರೆ ಸೌಲಭ್ಯಗಳ ಬಗ್ಗೆ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು.
ಗ್ರಾಮಗಳಿಗೆ ಭೇಟಿ ನೀಡುವ ಒಂದು ವಾರದ ಮೊದಲೇ ಕಂದಾಯ ಅಧಿಕಾರಿಗಳು ಗ್ರಾಮ ಭೇಟಿ ಸಮಯದಲ್ಲಿ ನೀಡಲಾಗಿರುವ ಕಾರ್ಯಸೂಚಿಗಳನ್ವಯ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ ಅರ್ಜಿಗಳ ಮೇಲೆ ಯಾರ ಹಂತದಲ್ಲಿ ಕ್ರಮಕೈಗೊಳ್ಳಬೇಕು ಎಂದು ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಗ್ರಾಮ ವಾಸ್ತವ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಲೇವಾರಿಯಾಗಿರುವ ಬಗ್ಗೆ ಸಂಬಂಧಪಟ್ಟ ಫಲಾನುಭವಿಗಳಿಗೆ ತಿಳಿಸುವುದು. ಅರ್ಜಿಗಳ ಮೇಲೆ ಬೇರೆ ಬೇರೆ ಹಂತದಲ್ಲಿ ವಿಚಾರಣೆಯ ಅವಶ್ಯಕತೆ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿ ಕಂದಾಯ ಇಲಾಖೆ, ಕೃಷಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಮತ್ತು ಇತರೆ ಇಲಾಖೆಯ ಫಲಾನುಭವಿಗಳಿಗೆ ಆದೇಶದ ಪ್ರತಿಯನ್ನು  ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *