April 29, 2024

Chitradurga hoysala

Kannada news portal

ಎಲ್ಲರೂ ಒಟ್ಟಾಗಿ ಸೇರಿ ಜಿಲ್ಲೆಯ ಸರ್ವಾಗೀಣ ಅಭಿವೃದ್ಧಿ ಮಾಡಲು ಪಣ: ಕವಿತಾ ಎಸ್ ಮನ್ನಿಕೇರಿ

1 min read


ಚಿತ್ರದುರ್ಗ, ಜು.29:
 ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕುಟುಂಬದಂತೆ ಕಾರ್ಯನಿರ್ವಹಿಸಲು ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಹಕಾರ ನೀಡಬೇಕು ಎಂದು ನೂತನ ಜಿಲ್ಲಾಧಿಕಾರಿಗಳಾದ ಕವಿತಾ ಎಸ್. ಮಣ್ಣಿಕೇರಿ ಜಿಲ್ಲೆಯ ಅಧಿಕಾರಿಗಳಿಗೆ ಮನವಿ ಮಾಡಿದರು.
    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನೂತನ ಜಿಲ್ಲಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ನಿರ್ಗಮಿತ ಜಿಲ್ಲಾಧಿಕಾರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
    ಕೋವಿಡ್-19 ಸೋಂಕು ಹರಡುವಿಕೆ ಮತ್ತು ತಡೆಗಟ್ಟುವಲ್ಲಿ ಜಿಲ್ಲೆಯ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳೂ ಕಡಿಮೆ ಸಂಖ್ಯೆಯಲ್ಲಿರುವುದು ಸಂತೋಷದ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ನಾನು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಎಲ್ಲ ಇಲಾಖೆಯ ಅಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿಗಳಿಗೆ ನೀಡಿದ ಸಹಕಾರವನ್ನು ತಮಗೂ ಉತ್ತಮವಾಗಿ ನೀಡಬೇಕು ಎಂದರು.
    ನಿರ್ಗಮಿತ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಮಾತನಾಡಿ, ಜಿಲ್ಲೆಯ ಅಧಿಕಾರಿಗಳು ಕುಟುಂಬದ ಹಾಗೇ ಕರ್ತವ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಸಹಕಾರ ನೀಡಿದ್ದಾರೆ ಎಂದು ಹೇಳಿದರು.
 ಯಾವುದೇ ಲೋಪಗಳು ಬಾರದಂತೆ ಜಿಲ್ಲೆಯ ಅಧಿಕಾರಿಗಳು ತಾವು ನೀಡಿದ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದರು. ಚುನಾವಣಾ ಸಮಯದಲ್ಲಿ ಹಾಗೂ ಬರ ಮತ್ತು ಪ್ರವಾಹ ಸಂದರ್ಭದಲ್ಲೂ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದರು.
  ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆರೋಗ್ಯ ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕೋವಿಡ್-19 ತಡೆಗಟ್ಟಲು ಬಹಳ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
 ಆಶಾಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸಹಕಾರ ನೀಡಿದ್ದರಿಂದ ಕೋವಿಡ್-19 ಪ್ರಕರಣಗಳು ಕಡಿಮೆಯಾಗಲು ಸಹಕಾರಿಯಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟಲು ಆಶಾಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದರು.
   ಕೋವಿಡ್-19 ತಡೆಗಟ್ಟಲು ಲಾಕ್‍ಡೌನ್ ಘೋಷಿಸಿದ ಸಂದರ್ಭದಲ್ಲಿ ಜಿಲ್ಲೆಯ ಜನರು ಸ್ವಯಂಪ್ರೇರಿತರಾಗಿ ಕಟ್ಟುನಿಟ್ಟಾಗಿ ಲಾಕ್‍ಡೌನ್ ನಿಯಮ ಹಾಗೂ ಸರ್ಕಾರದ ಮಾರ್ಗಸೂಚಿಗಳಂತೆ ನಿಯಮಗಳನ್ನು ಪಾಲಿಸುವ ಮೂಲಕ ಜನರು ಸಹಕಾರ ನೀಡಿದ್ದಾರೆ. ಆದಷ್ಟು ಬೇಗ ಜಿಲ್ಲೆಯು ಕೋವಿಡ್ ಮುಕ್ತ ಜಿಲ್ಲೆಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
    ನಿರ್ಗಮಿತ ಜಿಲ್ಲಾಧಿಕಾರಿ ವಿನೋತ್‍ಪ್ರಿಯಾ ಅವರಿಗೆ ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿದ ಅಪರ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, 2018 ರ ಡಿಸೆಂಬರ್ 04 ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿನೋತ್ ಪ್ರಿಯಾ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.  ಗ್ರಾಮ ವಾಸ್ತವ್ಯ, ಮತ್ತು ಜನಸಂಪರ್ಕ ಸಭೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದರ ಪರಿಣಾಮವಾಗಿ ಹಲವು ಗ್ರಾಮಗಳು, ಸಾರ್ವಜನಿಕರು ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಯಿತು.  ನೂತನ ಜಿಲ್ಲಾಧಿಕಾರಿಗಳಿಗೂ ಜಿಲ್ಲಾಡಳಿತದ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಉತ್ತಮ ಸಹಕಾರ ನೀಡಲಿದ್ದಾರೆ ಎಂದು ಭರವಸೆಯಿತ್ತರು.
    ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್.ಮಣ್ಣಿಕೇರಿ ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಆರ್.ವಿನೋತ್ ಪ್ರಿಯಾ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.
    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ಬಿಸಿಎಂ ಅಧಿಕಾರಿ ಅವಿನ್, ಆಹಾರ ಇಲಾಖೆ ಉಪನಿರ್ದೇಶಕ ಮಧುಸೂಧನ್ ಕಾರ್ಯಕ್ರಮ ಕುರಿತು ಮಾತನಾಡಿದರು.  ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


About The Author

Leave a Reply

Your email address will not be published. Required fields are marked *